Pages   (key to Page Status)   


ಅಂದಿನ ಶರಣರಿಗೆ ಇಂದಿನವರು ಸರಿಯಲ್ಲವೆಂದು ನುಡಿವ ಸಂದೇಹ ಸೂತಕ ಹೊಲೆಯರ ಮಾತ ಕೇಳಲಾಗದು. ಆ ಪಂಚಮಹಾಪಾತಕರ ಮುಖವ ನೋಡಲಾಗದು. ಅದೆಂತೆಂದೊಡೆ : ತಾ ಮೂಕೊರೆಯನೆಂದರಿಯದೆ ಕನ್ನಡಿಗೆ ಮೂಗಿಲ್ಲೆಂಬಂತೆ. ತಾ ಕುಣಿಯಲಾರದೆ ಅಂಗಳ ಡೊಂಕೆಂಬಂತೆ
ತನ್ನಲ್ಲಿ ನಡೆನುಡಿ ಸಿದ್ಧಾಂತವಿಲ್ಲದೆ ಇತರವ ಹಳಿವ ಅಧಮ ಮಾದಿಗರನೇನೆಂಬೆನಯ್ಯಾ ! ಅಷ್ಟಾವರಣ ಪಂಚಾಚಾರವು ಅಂದೊಂದು ಪರಿ ಇಂದೊಂದು ಪರಿಯೇ ? ಷಟ್‍ಸ್ಥಲ ಸ್ವಾನುಭಾವವು ಅಂದೊಂದು ಪರಿ ಇಂದೊಂದು ಪರಿಯೇ ? ಭಕ್ತಿ ವಿರಕ್ತಿ ಉಪರತಿ ಜ್ಞಾನ ವೈರಾಗ್ಯ ಅಂದೊಂದು ಪರಿ ಇಂದೊಂದು ಪರಿಯೇ ? ನಡೆನುಡಿ ಸಿದ್ಧಾಂತವಾದ ಶರಣರ ಘನವು ಅಂದೊಂದು ಪರಿ ಇಂದೊಂದು ಪರಿಯೇ ? ಇಂತೀ ವಿಚಾರವನರಿಯದೆ ಪರಸಮಯವನಾದಡೂ ಆಗಲಿ
ಶಿವಸಮಯವನಾದಡೂ ಆಗಲಿ
ವರ್ಮಗೆಟ್ಟು ನುಡಿವ ಕರ್ಮಜೀವಿಗಳ ಬಾಯಲ್ಲಿ ಬಾಲ್ವುಳ ಸುರಿಯದೆ ಮಾಣ್ಬುವೆ ಹೇಳಾ ಅಖಂಡೇಶ್ವರಾ ?