ಆದಿಯಲ್ಲಿ ಹುಟ್ಟಿತ್ತಲ್ಲ
ಅನಾದಿಯಲ್ಲಿ ಬೆಳೆಯಿತ್ತಲ್ಲ; ಮೂರ್ತಿಯಲ್ಲಿ ನಿಂದುದಲ್ಲ
ಅಮೂರ್ತಿಯಲ್ಲಿ ಭಾವಿಯಲ್ಲ; ಅರಿವಿನೊಳಗೆ ಅರಿದುದಲ್ಲ
ಮರಹಿನೊಳಗೆ ಮರೆದುದಿಲ್ಲ; ಎಂತಿರ್ದಡಂತೆ ಬ್ರಹ್ಮ ನೋಡಾ ! ಮನ ಮನ ಲೀಯವಾಗಿ ಘನ ಘನ ಒಂದಾದಡೆ ಮತ್ತೆ ಮನಕ್ಕೆ ವಿಸ್ಮಯವೇನು ಹೇಳಾ ? ಕೂಡಲಚೆನ್ನಸಂಗನ ಶರಣರು ಕಾಯವೆಂಬ ಕಂಥೆಯ ಕಳೆಯದೆ ಬಯಲಾದಡೆ ನಿಜವೆಂದು ಪರಿಣಾಮಿಸಬೇಕಲ್ಲದೆ ಅಂತಿಂತೆನಲುಂಟೆ ಸಂಗನಬಸವಣ್ಣಾ ?