ಶ್ರೀಗುರುವಾದಾತನು ಸಕಲಾಗಮಂಗಳ ಹೃದಯವನರಿತು ತನ್ನ ತಾನರಿದು ಸರ್ವಾಚಾರ ತನ್ನಲ್ಲಿ ನೆಲೆಗೊಂಡು ಉಪದೇಶವ ಮಾಡುವ ಕ್ರಮವೆಂತೆಂದಡೆ: ಬ್ರಾಹ್ಮಣನ ಮೂರು ವರುಷ ನೋಡಬೇಕು
ಕ್ಷತ್ರಿಯನ ಆರು ವರುಷ ನೋಡಬೇಕು
ವೈಶ್ಯನ ಒಂಬತ್ತು ವರುಷ ನೋಡಬೇಕು
ಶೂದ್ರನ ಹನ್ನೆರಡು ವರುಷ ನೋಡಬೇಕು
ನೋಡಿದಲ್ಲದೆ ದೀಕ್ಷೆ ಕೊಡಬಾರದು _ ವೀರಾಗಮೇ. ``ಬ್ರಾಹ್ಮಣಂ ತ್ರೀಣಿ ವರ್ಷಾಣಿ ಷಡಬ್ದಂ ಕ್ಷತ್ರಿಯಂ ತಥಾ ವೈಶ್ಯಂ ನವಾಬ್ದಮಾಖ್ಯಾತಂ ಶೂದ್ರಂ ದ್ವಾದಶವರ್ಷಕಂ ಈ ಕ್ರಮವನರಿಯದೆ
ಉಪಾಧಿವಿಡಿದು ಉಪದೇಶವ ಮಾಡುವಾತ ಗುರುವಲ್ಲ
ಉಪಾಧಿವಿಡಿದು ಉಪದೇಶವ ಮಾಡಿಸಿಕೊಂಬಾತ ಶಿಷ್ಯನಲ್ಲ. ಇವರಿಬ್ಬರ ನಿಲವು ಒಂದೆ ಠಕ್ಕನ ಮನೆಗೆ ಠಕ್ಕ ಬಿದ್ದಿನ ಬಂದಂತೆ ಈ ಗುರುಶಿಷ್ಯರಿಬ್ಬರನು ರೌರವನರಕದಲ್ಲಿಕ್ಕುವ ಕೂಡಲಚೆನ್ನಸಂಗಯ್ಯ.