ಹೊತ್ತಾರೆ ಎದ್ದು ಕಣ್ಣ ಹೊಸೆಯುತ್ತ
ಎನ್ನ ಒಡಲಿಂಗೆ
ಎನ್ನ ಒಡವೆಗೆಂದು ಎನ್ನ ಮಡದಿ-ಮಕ್ಕಳಿಗೆಂದು
ಕುದಿದೆನಾದಡೆ ಎನ್ನ ಮನಕ್ಕೆ ಮನವೆ ಸಾಕ್ಷಿ. ಆಸನೇ ಶಯನೇ ಯಾನೇ ಸಂಪರ್ಕೇ ಸಹಭೋಜನೇ ಸಂಚರಂತಿ ಮಹಾಘೋರೇ ನರಕೇ ಕಾಲಮಕ್ಷಯಂ ಎಂಬ ಶ್ರುತಿಯ ಬಸವಣ್ಣನೋದುವನು
ಭವಿ ಬಿಜ್ಜಳನ ಗದ್ದುಗೆಯ ಕೆಳಗೆ ಕುಳ್ಳಿರ್ದು ಓಲೈಸಿಹನೆಂದು ನುಡಿವರಯ್ಯಾ ಪ್ರಮಥರು. ಕೊಡುವೆನೆ ಉತ್ತರವನವರಿಗೆ ಕೊಡಲಮ್ಮೆ. ಹೊಲೆಹೊಲೆಯರ ಮನೆಯ ಹೊಕ್ಕಾದಡೆಯೂ ಸಲೆ ಕೈಕೂಲಿಯ ಮಾಡಿಯಾದಡೆಯೂ
ನಿಮ್ಮ ನಿಲವಿಂಗೆ ಕುದಿವೆನಲ್ಲದೆ
ಎನ್ನ ಒಡಲವಸರಕ್ಕೆ ಕುದಿದೆನಾದಡೆ ತಲೆದಂಡ ಕೂಡಲಸಂಗಮದೇವಾ !